ಪಂ. ಸುಧಾಕರ ಚತುರ್ವೇದಿಯವರು ಗಾಂಧೀಜಿಯ ಒಡನಾಡಿಯಾಗಿದ್ದವರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯರಾಗಿ ಪಾಲ್ಗೊಂಡು ಹದಿಮೂರು ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಕ್ರಾಂತಿಕಾರಿ ಭಗತ್ ಸಿಂಹನ ಗುರುವಾಗಿದ್ದವರು. ಶಿಷ್ಯ ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿ ಗಲ್ಲಿಗೇರಿಸಲ್ಪಟ್ಟು ಹುತಾತ್ಮನಾದರೆ, ಗುರು ಹತ್ಯಾಕಾಂಡದ ಪ್ರತ್ಯಕ್ಷ ಸಾಕ್ಷಿಯಾಗಿದ್ದವರು. ಅಷ್ಟೇ ಅಲ್ಲ, ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಸತ್ತವರ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿಸಿದವರು. 116 ವರ್ಷಗಳ ಪಂಡಿತರ ಬತ್ತದ ಜೀವನೋತ್ಸಾಹದ ವಿಚಾರಗಳು ಇಂದಿಗೂ ತಮ್ಮ ಎಂದಿನ ಪ್ರಖರತೆಯನ್ನು ಕಳೆದುಕೊಂಡಿಲ್ಲ. ಅವರ ನೇರ ಮಾತುಗಳು, ಅದರಲ್ಲಿನ ಖಚಿತತೆಗಳು ಬೆರಗು ಮೂಡಿಸುತ್ತವೆ. ನಾಲ್ಕೂ ವೇದಗಳನ್ನು ಗುರುಮುಖೇನ ಅಭ್ಯಸಿಸಿ ಅದರ ಸಾರವನ್ನು ಗ್ರಹಿಸಿ, ನಿಜವಾದ ಅರ್ಥದಲ್ಲಿ ಚತುರ್ವೇದಿಗಳೆನಿಸಿದವರು ಅವರು. ಜನರೊಡನೆ ಬೆರೆತು ಗಳಿಸಿರುವ ಅವರ ನೂರು ವರ್ಷಗಳಿಗೂ ಮೇಲ್ಪಟ್ಟ ಅಪೂರ್ವ ಜೀವನಾನುಭವ ಅವರೊಡನಿದೆ. ನೇರ ನಡೆ-ನುಡಿಯ, ಪ್ರಚಾರ ಬಯಸದ ಸರಳ ವ್ಯಕ್ತಿತ್ವದ ಅವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ ಸತ್ಸಂಗವಿರುತ್ತದೆ. ಸತ್ಸಂಗದಲ್ಲಿ ಅವರು ಯಾವುದಾದರೂ ವಿಷಯ ಕುರಿತು ಮಾತನಾಡುತ್ತಾರೆ. ಅಂತಹ ಕೆಲವು ಸತ್ಸಂಗಗಳಲ್ಲಿ ಅವರು ಹೇಳಿದ ಮಾತುಗಳನ್ನು ಗುರುತು ಹಾಕಿಕೊಂಡು ಅಕ್ಷರ ರೂಪ ಕೊಡುವ ಪ್ರಯತ್ನ ಮಾಡಿದ್ದೇನೆ. ಅವರ ಮಾತುಗಳು ನಮ್ಮಲ್ಲಿ ವಿಚಾರ ತರಂಗಗಳನ್ನೆಬ್ಬಿಸುತ್ತವೆ, ಅಂತರಂಗವನ್ನು ಬಡಿದೆಬ್ಬಿಸುತ್ತವೆ. ಅವರ ಕೆಲವು ವಿಚಾರಗಳು ಎಲ್ಲರಿಗೂ ಹಿಡಿಸಲಾರವು. ಆದರೆ ಅವರ ವಿಚಾರಗಳು ಸ್ವವಿಮರ್ಶೆಗೆ, ಆಲೋಚನೆಗೆ ಎಡೆ ಮಾಡಿಕೊಟ್ಟಲ್ಲಿ ಲೇಖನ ಸಾರ್ಥಕವಾದಂತೆ. ಚತುರ್ವೇದಿಗಳೇ ಹೇಳುವಂತೆ ಅವರ ಮಾತುಗಳನ್ನು ಒಪ್ಪಲೇಬೇಕೆಂದಿಲ್ಲ. ಆಲೋಚಿಸಿ, ವಿಮರ್ಶಿಸಿ ಸರಿ ಅನ್ನಿಸಿದರೆ ಮಾತ್ರ ಒಪ್ಪಬಹುದು. ಇಲ್ಲದಿದ್ದರೆ ಪಕ್ಕಕ್ಕೆ ಸರಿಸಿಬಿಡಬಹುದು. ಇಲ್ಲಿವೆ ಅವರ ವಿಚಾರದ ತುಣುಕುಗಳ ಮುಂದುವರೆದ ಭಾಗ . .
-ಕ.ವೆಂ.ನಾಗರಾಜ್.
****************
ಆತ್ಮವಂಚನೆ ಬೇಡ
ಆತ್ಮವಂಚನೆ ಬೇಡ
ಸರ್ದಾರ್ ಭಗತ್ ಸಿಂಗ್ ಹೆಸರು ಕೇಳಿದ್ದೀರಿ, ಮಹಾನ್ ಕ್ರಾಂತಿಕಾರಿ, ಅವನು ನನ್ನ ಶಿಷ್ಯ. ಲಾಹೋರಿನಲ್ಲಿ ದಯಾನಂದ ಆರ್ಯ ವೇದಿಕ್ ಕಾಲೇಜಿನಲ್ಲಿ ಅವನು ಓದುತ್ತಿದ್ದಾಗ ನಾನು ಗಣಿತದ ಪಾಠ ಹೇಳಲು ಹೋಗುತ್ತಿದ್ದೆ. ಒಂದು ಸಲ ಅವನು ನನ್ನ ಹತ್ತಿರ ಬಂದು ಹೇಳಿದ್ದ - "ಪಂಡಿತಜಿ, ನಾನು ಲೆಕ್ಕದಲ್ಲಿ ಸ್ವಲ್ಪ ಹಿಂದೆ. ಕಡಿಮೆ ಅಂಕ ಬಂದರೆ, ಕರುಣೆ ಇದ್ದರೆ ನನಗೆ ಐದು ಅಂಕ ಸೇರಿಸಿ ಕೊಟ್ಟರೆ ಉಪಕಾರವಾಗುತ್ತದೆ". ನಾನು ಹೇಳಿದ್ದೆ- "ಲಕ್ಷಣವಾಗಿ ಫೇಲಾಗು. ನಾನು ಅಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ". 'ಇವನು ನನ್ನ ಶಿಷ್ಯ, ಇವನು ಉದ್ಧಾರವಾಗಲಿ' ಎಂದು ನಾನು ಅಂಕ ಸೇರಿಸಿಕೊಟ್ಟು ನನ್ನ ಆತ್ಮವಂಚನೆ ಮಾಡಿಕೊಳ್ಳಲು ನಾನು ಸಿದ್ಧನಿರಲಿಲ್ಲ.
ಬದುಕೋಣ
ಸ್ವಲ್ಪ ಯೋಚನೆ ಮಾಡಿ, ಒಂದು ಜೈಲಿನಲ್ಲಿ ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ಕುಳಿತುಕೊಂಡರೆ ಎಷ್ಟು ಬೇಸರವಾಗುತ್ತದೆ. ಅಂತಹುದರಲ್ಲಿ ಒಟ್ಟು ೧೩ ವರ್ಷ ಜೈಲಿನಲ್ಲಿ -ಕರಾಚಿಯಿಂದ ಹಿಡಿದು ಬೆಂಗಳೂರು ಸೆಂಟ್ರಲ್ ಜೈಲಿನವರೆಗೆ, ಕೊಚ್ಚಿ, ಆಂಧ್ರ ಸೇರಿ ಹಲವು ಜೈಲುಗಳಲ್ಲಿ -ಕಳೆದಿದ್ದೇನೆ. ಅಲ್ಲಿನ ರೊಟ್ಟಿ, ಅನ್ನ ಎಲ್ಲಾ ತಿಂದಿದ್ದೇನೆ. ಅದೂ ಎಂತಹ ರೊಟ್ಟಿ? ಹಿಟ್ಟಿನಲ್ಲಿ ಬೇಕಂತಲೇ ಮರಳು ಸೇರಿಸಿ ತಿನ್ನಕ್ಕಾಗಬಾರದು ಎಂದು ಮಾಡಿದ್ದ ರೊಟ್ಟಿ. ಸಾರಿನಲ್ಲೂ ಬೇಳೆಕಾಳು ಕಡಿಮೆ, ಮರಳೇ ಜಾಸ್ತಿ. ಅದನ್ನೇ ತಿಂದು ಬದುಕಬೇಕು. ಭಗವಂತನ ದಯೆ ಅಂತ ಕಾಣುತ್ತೆ, ಅಂತಹುದನ್ನು ತಿಂದೂ ಸಹ ಈಗಲೂ ಬದುಕಿದ್ದೀನಿ, ಇನ್ನೂ ಸಾಯುವ ಯೋಚನೆಯಿಲ್ಲ್ಲ. ಏಕೆಂದರೆ ಬದುಕುವುದು ಕಷ್ಟ, ಸಾಯುವುದು ಸುಲಭ, ಬಹಳ ಸುಲಭ. ಸುಲಭವೆಂದು ಹೇಳಿ ಸಾಯಲು ಹೋಗಬಾರದು. ಪೂರ್ಣವಾಗಿ ಬದುಕಬೇಕು.
Optimism is life,
Pessimism is death itself!
ವೇದ ಹೇಳುತ್ತೆ, ಸರಿಯಾಗಿ ಬಾಳಿದರೆ ಜಮದಗ್ನಿಗೆ ೩೦೦ ವರ್ಷ ಆಯಸ್ಸು ಅಂತ. ಜಮದಗ್ನಿ ಅಂದರೆ ಋಷಿಯ ಹೆಸರಲ್ಲ, ಅಗ್ನಿಯನ್ನು ತನ್ನ ವಶದಲ್ಲಿಟ್ಟುಕೊಂಡವನು, ಅಗ್ನಿಹೋತ್ರ ಮಾಡುವವನು -ಗೃಹಸ್ಥ/ಗೃಹಿಣಿ - ಅವರು ಜಮದಗ್ನಿ ಎಂದು ಅರ್ಥ. ನಿಜವಾಗಿ ಅರ್ಥ ಇಟ್ಟುಕೊಂಡು ಮಾಡಿದರೆ ಅಂದರೆ ಅಗ್ನಿಯನ್ನು ವಶದಲ್ಲಿಟ್ಟುಕೊಂಡರೆ ೩೦೦ ವರ್ಷ ಬದುಕಬಹುದು. ಅಷ್ಟೊಂದು ಭಗವಂತ ನಮಗೆ ಹೇಳಿರುವಾಗ ನಾವು ಯಾಕೆ ಸಾಯಬೇಕು, ಸಾಯಬೇಕು ಅನ್ನಬೇಕು? ಆ ಸಾವು ಇದೆಯಲ್ಲಾ, ಅದು ನಿರ್ಲಜ್ಜ. ನೀವು ಕರೆದರೂ ಬರುತ್ತೆ, ಕರೆಯದಿದ್ದರೂ ಬರುತ್ತೆ. ಯಾವತ್ತೂ ನೀವು ಸಾಯಬೇಕು ಎಂದು ಆಸೆಪಡಲೇಬೇಡಿ. 'ಜೀವೇದ ಶರದಶ್ಶತಮ್' ಕನಿಷ್ಠ ಪಕ್ಷ ನೂರು ವರ್ಷ ಆದರೂ ಬದುಕಿರಬೇಕು, ನೂರು ವರ್ಷಕ್ಕಿಂತ ಹೆಚ್ಚುಕಾಲ ಬದುಕೋಣ. ಲೋಕಾರೂಢಿ 'ಶತಾಯುರ್ ವಯ ಪುರುಷಃ' ಅಂತ, ಒಬ್ಬ ಮನುಷ್ಯನ ವಯಸ್ಸು ನೂರು ವರ್ಷ, ನೂರು! ಆಶ್ಚರ್ಯ ಪಡಬೇಡಿ, ನಾವು ಆಸ್ತಿಕರು, ಭಗವಂತನಲ್ಲಿ ನಂಬಿಕೆ ಇರುವವರು, ಜೀವನವನ್ನು ಪರಿಪಕ್ವವಾಗಿ ಇಟ್ಟುಕೊಳ್ಳಬೇಕು ಅನ್ನುವವರು, ನಾವು ಏಕೆ ಆಸೆ ಕಳೆದುಕೊಳ್ಳಬೇಕು? ರಷ್ಯಾದಲ್ಲಿ ಕೆಲವು ಪ್ರದೇಶಗಳಿವೆ, ಡಡ್ ಸೀ ಅಂತ, ಸತ್ತ ಸಮುದ್ರ, ಅದು ಯಾವ ಕಾಲದಲ್ಲಿ ನೀರಿತ್ತೋ, ಈಗ ನೀರಿಲ್ಲ, ಅದರ ಸುತ್ತಮುತ್ತ ಎಲ್ಲಾ ಸಾವೇ! ಅಂತಹ ಕಡೆ ಕೂಡ ಒಬ್ಬ ಮುದುಕ ೧೯೦ ವರ್ಷ ಬದುಕಿದ್ದನಂತೆ. ತಿನ್ನಬಾರದ್ದೆಲ್ಲಾ ತಿಂದುಕೊಂಡು, ಕುಡಿಯಬಾರದ್ದೆಲ್ಲಾ ಕುಡಿದುಕೊಂಡು, ಮಾಡಬಾರದ್ದೆಲ್ಲಾ ಮಾಡಿಕೊಂಡು ೧೯೦ ವರ್ಷ ಬದುಕಿದ್ದ. ಅಂಥವನೇ ಅಷ್ಟು ಕಾಲ ಬದುಕಿದ್ದಾಗ ಪವಿತ್ರವಾಗಿ ಬಾಳುವ ನಮಗೇಕೆ ಸಾಧ್ಯವಿಲ್ಲ? ನಾವು ಸೋತುಬಿಡುತ್ತೇವೆ, ಅದೇ ಕಷ್ಟ, ಸೋಲಿನ ಮನೋಭಾವ ಇದೆಯಲ್ಲಾ, ನಿರಾಶಾವಾದ ಅದು ತುಂಬಾ ಕೆಟ್ಟದ್ದು. ನಾನು ದುರ್ಯೋಧನನ ಉದಾಹರಣೆ ಕೊಡುತ್ತೇನೆ. ಭೀಷ್ಮ ಹೋದರು, ದ್ರೋಣ ಹೋದರು, ಕರ್ಣನೂ ಹೋದ. ಆದರೆ ಶಲ್ಯ ಇನ್ನೂ ಇದ್ದಾನೆ, ಅವನು ಪಾಂಡವರನ್ನು ಜಯಿಸಿ ನನಗೆ ಗೆಲುವು ತಂದುಕೊಡುತ್ತಾನೆ ಎಂಬ ವಿಶ್ವಾಸ ಅವನಿಗೆ. ಶಲ್ಯನೂ ಹೋದ, ದುರ್ಯೋಧನನೂ ಸತ್ತ, ಅದು ಬೇರೆ ವಿಷಯ. ಬದುಕುವ ಅವನ ಆತ್ಮವಿಶ್ವಾಸ ಮೆಚ್ಚುವಂತಹುದು. ಮುಖ್ಯವಾಗಿ ನನ್ನ ಗುರು ಸ್ವಾಮಿ ಶ್ರದ್ಧಾನಂದಜೀಯವರು ಹೇಳುತ್ತಿದ್ದರು -'Optimism is life,
Pessimism is death itself!'
ಸಾವನ್ನು ಸ್ವಾಗತಿಸುವ ಧೈರ್ಯ
ಸಾವನ್ನು ಏಕೆ ಬಯಸಬೇಕು? ಅದು ಬಂದೇ ಬರುತ್ತೆ, ಬಂದಾಗ ಹೋಗೋಣ, ಸಾವು ಬಂದಾಗ ಸ್ವಾಗತಿಸೋಣ, ಯಮನಿಗೆ ನಮಸ್ಕರಿಸಿ ಹೊರಡೋಣ. ಯಮ ಅಂದರೆ ಕೋಣನ ಮೇಲೆ ಕುಳಿತುಕೊಂಡು ಬರುತ್ತಾನೆ ಅಂತಾರಲ್ಲ, ಅವನಲ್ಲ, ಸಂಪೂರ್ಣ ಜಗತ್ತನ್ನೇ ತನ್ನ ವಶದಲ್ಲಿಟ್ಟುಕೊಂಡಿದ್ದಾನಲ್ಲಾ, ಜಗನ್ನಿಯಾಮಕ ಭಗವಂತ, ಅವನು ಯಮ! ಅವನು ಅನ್ಯಾಯವಾಗಿ ಯಾರಿಗೂ ಸಾವು ಕೊಡುವುದಿಲ್ಲ, ಯಾವನ ಇಚ್ಛೆಯಿಂದಲೇ ಅಮೃತ ಸಿಕ್ಕುತ್ತೋ, ಯಾವನ ಇಚ್ಛೆಯಿಂದ ಸಾವು ಸಿಗುತ್ತದೋ ಆ ಯಮನಿಗೆ ನಮಸ್ಕಾರ! ಸಾವು, ಬಾಳು ಎರಡೂ ಅವನ ವಶದಲ್ಲೇ ಇದೆ, ಆ ಪರಮಾತ್ಮ ಯಾವ ಜೀವ ಎಷ್ಟು ಬಾಳಬೇಕು, ಬದುಕಬೇಕು ಅದನ್ನು ನಿರ್ಧರಿಸಿರುತ್ತಾನೆ, ಅದು ತೀರುವವರೆಗೂ ಸಾಯುವಹಾಗಿಲ್ಲ, ಬಾವಿಗೆ ಬಿದ್ದು, ನೇಣು ಹಾಕಿಕೊಂಡು ಮುಂಚೆಯೇ ಸತ್ತರೆ ಅದು ಭಗವದಿಚ್ಛೆಗೆ ವಿರುದ್ಧ, ನಿಜವಾದ ಸಾವಲ್ಲ, ಅಪಮೃತ್ಯು, ಅದು ಯಾರಿಗೂ ಬೇಡ, ಅದಾಗೇ ಸಾವು ಬಂದಾಗ ಬಾ ಮೃತ್ಯು, ಕರೆದುಕೊಂಡು ಹೋಗು ಎಂದು ಹೇಳುವ ಧೈರ್ಯ ನಮಗೆಲ್ಲಿ ಬರಬೇಕು! ಸ್ವಾಮಿ ದಯಾನಂದರಿಗೆ ಸಾವು ಬಂದಾಗ ಅವರು ಅಳುಕಲಿಲ್ಲ, ಭಗವಂತ, ನಿನ್ನ ಇಚ್ಛೆ, ಕರೆದುಕೊಂಡು ಹೋಗು ಎಂದರು.* ಅವರಿಗೆ ಸಾಯಬೇಕೆಂದಿರಲಿಲ್ಲ. ಭಗವಂತನ ಇಚ್ಛೆಯಿದ್ದರಿಂದ ಸಾಯಲು ಸಿದ್ಧರಾದರು, ಅಷ್ಟೆ. ಬದುಕುವುದಕ್ಕೆ ಆ ಹಟ ಇರಬೇಕು. ಯಾವತ್ತೂ ಸಾಯಬೇಕೆಂದು ಬಯಸಬೇಡಿ. ಏಕೆಂದರೆ ಆ ಆಸೆ ಇದೆಯಲ್ಲಾ ಅದು ದುರಾಸೆ, ಅದು ನಮ್ಮ ನಿಜವಾದ ನಿಶ್ಚಯ ಶಕ್ತಿಯನ್ನೇ ಹಾಳುಮಾಡಿಬಿಡುತ್ತದೆ.
*********************************
[*ಟಿಪ್ಪಣಿ: ಸ್ವಾಮಿ ದಯಾನಂದರ ಸಾವು:
ಮಹರ್ಷಿ ದಯಾನಂದ ಸರಸ್ವತಿಯವರದು ಸಹಜ ಸಾವಲ್ಲ. ಕೊಲೆ ಎನ್ನಬಹುದು. ೧೮೮೩ರಲ್ಲಿ ಜೋಧಪುರದ ಮಹಾರಾಜರ ಆಹ್ವಾನದ ಮೇಲೆ ಅವರ ಅತಿಥಿಯಾಗಿ ಹೋಗಿ ಅರಮನೆಯಲ್ಲಿ ತಂಗಿದ್ದರು. ಮಹಾರಾಜನಿಗೆ ಅವರ ಶಿಷ್ಯನಾಗಿ ಉಪದೇಶಗಳನ್ನು ತಿಳಿಯುವ ಆಸಕ್ತಿಯಿತ್ತು. ಒಮ್ಮೆ ದಯಾನಂದರು ಮಹಾರಾಜರ ವಿಶ್ರಾಂತಿ ಕೊಠಡಿಗೆ ಹೋದ ಸಂದರ್ಭದಲ್ಲಿ ಮಹಾರಾಜರು ನನ್ಹಿಜಾನ್ ಎಂಬ ನೃತ್ಯಗಾತಿಯ ಜೊತೆಗೆ ಇದ್ದುದನ್ನು ಕಂಡರು. ದಯಾನಂದರು ತಮ್ಮ ಸ್ವಭಾವಕ್ಕೆ ಅನುಗುಣವಾಗಿ ಧೈರ್ಯವಾಗಿ ಮತ್ತು ನೇರವಾಗಿ ಮಹಾರಾಜರಿಗೆ ಸ್ತ್ರೀ ಸಹವಾಸ ಬಿಡಲು ಮತ್ತು ಒಬ್ಬ ನಿಜವಾದ ಆರ್ಯ(ಸಭ್ಯ)ನಂತೆ ಧರ್ಮ ಪಾಲನೆ ಮಾಡುವಂತೆ ಹೇಳಿದರು. ದಯಾನಂದರ ಸಲಹೆ ಆ ನೃತ್ಯಗಾತಿಯನ್ನು ಕೆರಳಿಸಿತು ಮತ್ತು ಸೇಡಿಗಾಗಿ ಹಪಹಪಿಸುವಂತೆ ಮಾಡಿತು. ಅಡಿಗೆ ಭಟ್ಟನಿಗೆ ಆಕೆ ಲಂಚ ನೀಡಿ ದಯಾನಂದರಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಡಲು ಒಪ್ಪಿಸಿದಳು. ಅಡಿಗೆ ಭಟ್ಟ ರಾತ್ರಿಯ ಮಲಗುವ ಸಮಯದಲ್ಲಿ ವಿಷ ಮತ್ತು ನುಣ್ಣಗೆ ಪುಡಿ ಮಾಡಿದ ಗಾಜಿನ ಹರಳುಗಳನ್ನು ಸೇರಿಸಿದ ಹಾಲನ್ನು ದಯಾನಂದರಿಗೆ ಕುಡಿಯಲು ಕೊಟ್ಟ. ಹಾಲು ಕುಡಿದು ಮಲಗಿದ ದಯಾನಂದರಿಗೆ ಕೆಲ ಸಮಯದಲ್ಲಿಯೇ ಹೊಟ್ಟೆಯ ಒಳಗೆ ಸುಡುವ ಅನುಭವವಾದಾಗ ಎಚ್ಚರವಾಗಿ ತಮಗೆ ವಿಷ ಉಣಿಸಿದ್ದಾರೆಂದು ಗೊತ್ತಾಗಿ ವಿಷವನ್ನು ಹೊರಹಾಕಲು ಪ್ರಯತ್ನಿಸಿದರು. ಆದರೆ ಅದಾಗಲೇ ತಡವಾಗಿತ್ತು. ವಿಷವಾಗಲೇ ರಕ್ತ ಸೇರಿಬಿಟ್ಟಿತ್ತು. ಅವರು ಹಾಸಿಗೆ ಹಿಡಿದು ಅಸಾಧ್ಯ ನೋವನ್ನು ಸಹಿಸಬೇಕಾಯಿತು. ಅನೇಕ ವೈದ್ಯರುಗಳು ನೀಡಿದ ಚಿಕಿತ್ಸೆ ಫಲಕಾರಿ ಆಗಲಿಲ್ಲ. ಅವರ ದೇಹದಲ್ಲಿ ಎಲ್ಲೆಲ್ಲೂ ರಕ್ತ ಸೋರುವ ಹುಣ್ಣುಗಳಾದವು. ಅವರ ಸ್ಥಿತಿಯನ್ನು ನೋಡಲಾಗದ ಅಡಿಗೆ ಭಟ್ಟ ಕಣ್ಣೀರು ಸುರಿಸುತ್ತಾ ಬಂದು ದಯಾನಂದರಲ್ಲಿ ತನ್ನ ತಪ್ಪು ಒಪ್ಪಿಕೊಂಡ. ಅಂತಹ ಸಾವಿನ ಸಮೀಪದಲ್ಲಿ ಇದ್ದಾಗಲೂ ದಯಾನಂದರು ಆತನನ್ನು ಕ್ಷಮಿಸಿದ್ದಲ್ಲದೆ, ಅವನಿಗೆ ಒಂದು ಥೈಲಿಯಲ್ಲಿ ಹಣ ನೀಡಿ ಆದಷ್ಟು ಬೇಗ ರಾಜ್ಯ ತೊರೆದು ಹೋಗಿ ಮಹಾರಾಜರ ಭಟರಿಂದ ಜೀವ ಉಳಿಸಿಕೊಳ್ಳಲು ಸಲಹೆ ನೀಡಿದ್ದರು. ೩೦-೧೦-೧೯೮೩ರಲ್ಲಿ ಅವರು ದೇಹತ್ಯಾಗ ಮಾಡಿದರು. ಅಂತಹ ಸಾವನ್ನೂ ಸಹ ಅವರು ಆದರದಿಂದ ಬರಮಾಡಿಕೊಂಡಿದ್ದರು.
ಲಗತ್ತು ಚಿತ್ರ: ಮಹರ್ಷಿ ದಯಾನಂದ ಸರಸ್ವತಿಯವರ ನೆನಪಿಗೆ ಬಿಡುಗಡೆಯಾಗಿದ್ದ 15 ನಯಾಪೈಸೆಗಳ ಅಂಚೆ ಚೀಟಿ.]
***********************
ಹಿಂದಿನ ಲೇಖನಕ್ಕೆ ಲಿಂಕ್: