ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ನವೆಂಬರ್ 22, 2015

ಸಾಧನಾ ಸೋಪಾನ - 10: ಕ್ಷಮಾಶೀಲ ಧರಿತ್ರಿ


     ಒಂದು ಸಂಗತಿ ದೊಡ್ಡದೆಂದುಕೊಂಡರೆ ಅದಕ್ಕಿಂತ ದೊಡ್ಡದಾದುದು ಗೋಚರಿಸುತ್ತಾಹೋಗುತ್ತದೆ. ವಿವೇಚನಾಶಕ್ತಿ ಇರುವ ಮಾನವನಿಗೆ ಜ್ಞಾನ ದೊಡ್ಡದು. ಜ್ಞಾನಕ್ಕೆ ಮೂಲವಾದ ವಾಕ್ಕು ಜ್ಞಾನಕ್ಕಿಂತ ಹಿರಿದು. ವಾಕ್ಕಿಗಿಂತ ಮನಸ್ಸು, ಮನಸ್ಸಿಗಿಂತ ಇಚ್ಛಾಶಕ್ತಿ, ಇಚ್ಛಾಶಕ್ತಿಗಿಂತ ಸ್ಮರಣಶಕ್ತಿ, ಸ್ಮರಣಶಕ್ತಿಗಿಂತ ಮನೋಕೇಂದ್ರೀಕರಣ(ಧ್ಯಾನ), ಧ್ಯಾನಕ್ಕಿಂತ ಧ್ಯಾನ ಏಕೆ ಮತ್ತು ಹೇಗೆ ಎಂಬ ಅರಿವು ಮಿಗಿಲೆಂಬುದನ್ನು ಅರಿತೆವು. ದೈಹಿಕ ಮತ್ತು ಮಾನಸಿಕ ಬಲವಿಲ್ಲದಿದ್ದರೆ ಮೇಲಿನದೆಲ್ಲವೂ ವ್ಯರ್ಥವಾದ್ದರಿಂದ ಶಕ್ತಿಯೇ ಮಿಗಿಲು. ಶಕ್ತಿಗೆ ಕಾರಣವಾದ 'ಅನ್ನ' ಅದಕ್ಕಿಂತಲೂ ಮಿಗಿಲು. ಈ 'ಅನ್ನ'ಕ್ಕಿಂತ ಹೆಚ್ಚಿನದಾದುದು ಪಂಚಭೂತಗಳೆಂದು ಕರೆಯಲ್ಪಡುವ ನೆಲ, ಜಲ, ಅಗ್ನಿ, ವಾಯು ಮತ್ತು ಆಕಾಶಗಳು! ಏಕೆಂದರೆ, ಅನ್ನದ ಉತ್ಪತ್ತಿಗೆ ಇವು ಅಗತ್ಯವಾಗಿವೆ. ಜೀವಿಗಳು ಸಹ ಪಂಚಭೂತಗಳ ಆವಿಷ್ಕಾರವಾಗಿವೆ; ಪಂಚಭೂತಗಳ ಸೂಕ್ತ ಸಂಯೋಜನೆಯೊಂದಿಗೆ ಜೀವ ಚೈತನ್ಯ ಸೇರಿಕೊಂಡು ಜೀವಿಗಳು ಎನ್ನಿಸಿಕೊಳ್ಳುತ್ತವೆ. ಪ್ರಧಾನವಾದ ಭೂಮಿಯ ಕುರಿತು ಇಲ್ಲಿ ವಿವೇಚಿಸೋಣ.
     'ಅನ್ನ' ಎಂಬ ಪದಕ್ಕೆ ಬಹು ವಿಶಾಲ ಅರ್ಥವಿದ್ದು, ಅದು ಕೇವಲ ನಾವು ಸೇವಿಸುವ ಆಹಾರ ಮಾತ್ರವಾಗಿರದೆ, ಜೀವಜಗತ್ತಿನ ಪೋಷಣೆಗೆ ನೆರವಾಗುವಂತಹ ಯಾವುದೇ ಸಂಗತಿ ಅಥವ ವಸ್ತುವಾಗಿದೆ. ಅದು ಇಡೀ ವಿಶ್ವದ ಚೈತನ್ಯದ ಮೂಲವಾಗಿದೆ. ಈ ಅರ್ಥದಲ್ಲಿ ಜೀವ ಜಗತ್ತಿಗೆ ಆಧಾರಪ್ರಾಯವಾದ ಇಡೀ ಭೂಮಿಯೂ ಸಹ ಆನ್ನವನ್ನು ಪ್ರತಿನಿಧಿಸುತ್ತದೆ, ಈ ಭೂಮಿ ರಚನೆಯಾದುದಾದರೂ ಹೇಗೆ? ವ್ಶೆಜ್ಞಾನಿಕವಾಗಿ ಹೇಳುವುದಾದರೆ ಸುಖಾಸುಮ್ಮನೆ ಶೂನ್ಯದಿಂದ ಯಾವುದೇ ಸೃಷ್ಟಿ ಸಾಧ್ಯವೇ ಇಲ್ಲ. ಇರುವುದನ್ನು ರೂಪಾಂತರ ಮಾಡಿ ಇನ್ನೊಂದು ರೂಪಕ್ಕೆ ತರಬಹುದಷ್ಟೇ. ದೇವರು ಈ ಜಗತ್ತಿನ ಜನಕನೆಂದು ಧರ್ಮಗ್ರಂಥಗಳು ಹೇಳುತ್ತವೆ. ಆದರೆ ಯಾವುದರಿಂದ ಸೃಷ್ಟಿಸಿದ? ಏಕೆ ಸೃಷ್ಟಿಸಿದ? ಹೇಗೆ ಸೃಷ್ಟಿಸಿದ?  ತರ್ಕಬದ್ಧವಾಗಿ ನೋಡಿದರೆ ಈ ಜಡ ಜಗತ್ತಿನ ಸೃಷ್ಟಿ ಶೂನ್ಯದಿಂದಂತೂ ಆಗಿರಲಾರದು. ದೇವರ ಸೃಷ್ಟಿ, ಶೂನ್ಯದಿಂದ ಸೃಷ್ಟಿಸಿದ ಎಂಬುದನ್ನು ವಾದದ ಸಲುವಾಗಿ ಒಪ್ಪಿಕೊಂಡರೂ, ಪ್ರಶ್ನೆ ಉದ್ಭವಿಸುತ್ತದೆ. ದೇವರು ಶೂನ್ಯದಿಂದ ಏನು ಬೇಕಾದರೂ ಸೃಷ್ಟಿಸಬಹುದಾದರೆ ಇನ್ನೊಬ್ಬ ತನ್ನಷ್ಟೇ ಅಥವ ತನಗಿಂತ ಬಲಿಷ್ಠ ದೇವರನ್ನು ಸೃಷ್ಟಿಸಬಲ್ಲನೇ ಎಂದರೆ ಉತ್ತರ ಕೊಡುವುದು ಕಷ್ಟ. ಒಂದು ಕಟ್ಟಡವನ್ನು ಯಾವುದೇ ವಸ್ತುಗಳ ಸಹಾಯವಿಲ್ಲದೆ ನಿರ್ಮಿಸಲು ಸಾಧ್ಯವಿದೆಯೇ? ಅದಕ್ಕೆ ಇಟ್ಟಿಗೆ, ಕಲ್ಲು, ಸಿಮೆಂಟು, ಮರಳು, ಕಬ್ಬಿಣ, ಮುಂತಾದವು ಇರಲೇಬೇಕು. ಕಟ್ಟಡದಲ್ಲಿರುವ ವಸ್ತುಗಳು ಮೊದಲೂ ಇದ್ದವು, ಈಗಲೂ ಇದ್ದಾವೆ, ಆದರೆ ಬೇರೆ ಬೇರೆ ರೂಪಗಳಲ್ಲಿ! ಕಟ್ಟಡ ಬಿದ್ದು ಹೋದರೂ, ನಾಶವಾದರೂ, ಅದರಲ್ಲಿ ಬಳಕೆಯಾದ ವಸ್ತುಗಳು ಮುಂದೂ ಸಹ ಒಂದಲ್ಲಾ ಒಂದು ರೀತಿಯಲ್ಲಿ ಯಾವಾಗಲೂ ಇರುತ್ತವೆ. ಹೀಗೆಯೇ ಈ ಜಗತ್ತೂ ಸಹ ಮೊದಲೂ ಇತ್ತು, ಈಗಲೂ ಇದೆ, ಮುಂದೂ ಇರುತ್ತದೆ, ಆದರೆ ಬೇರೆ ರೂಪಾಂತರಗಳಲ್ಲಿ ಎನ್ನವುದು ಹೆಚ್ಚು ಸಮಂಜಸ ವಾದವಾಗುತ್ತದೆ. ಶೂನ್ಯದಿಂದ ಏನೂ ಸೃಷ್ಟಿಸಲು ಸಾಧ್ಯವಿಲ್ಲವೆನ್ನುವುದನ್ನು ಒಪ್ಪುವುದಾದರೆ, ಜಡ ಪ್ರಕೃತಿಯಿಲ್ಲದಿದ್ದರೆ ಸ್ವತಃ ದೇವರೂ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲವೆಂದು ಒಪ್ಪಲೇಬೇಕಾಗುತ್ತದೆ. ಹಾಗಾಗಿ ಈ ಜಗತ್ತು ಮೊದಲಿನಿಂದಲೂ ಇತ್ತು, ಮುಂದೂ ಇರುತ್ತದೆ, ಎಂದೆಂದೂ ಇರುತ್ತದೆ, ಅದು ಜೀವ ಹಾಗೂ ದೇವರಂತೆ ಅನಂತ, ಶಾಶ್ವತ ಎಂದು ತಿಳಿಯಬೇಕಾಗುತ್ತದೆ.
     ಇಂತಹ ಶಾಶ್ವತವಾದ ಜಗತ್ತಿನ ರಚನೆಯ ವಿಚಾರದಲ್ಲಿ ಋಗ್ವೇದ ಬೆಳಕು ಚೆಲ್ಲಿರುವುದು ಹೀಗೆ:
ನಾಸದಾಸೀನ್ನೋ ಸದಾಸೀತ್ ತದಾನೀಂ ನಾಸೀದ್ರಜೋ ನೋ ವ್ಯೋಮಾ ಪರೋ ಯತ್ |
ಕಿಮಾವರೀವಃ ಕುಹ ಕಸ್ಯ ಶರ್ಮನ್ನಂಭಃ ಕಿಮಾಸೀದ್ಗಹನಂ ಗಭೀರಮ್ || (ಋಕ್. ೧೦.೧೨೯.೧)
     ಸೃಷ್ಟಿಯ ಮುನ್ನ ಶೂನ್ಯವಿರಲಿಲ್ಲ, ಈ ಲೋಕವಿರಲಿಲ್ಲ ಮತ್ತು ಆಕಾಶವೂ ಇರಲಿಲ್ಲ. ಆದರೆ ಎಲ್ಲವನ್ನೂ ಆವರಿಸುವ ಗಂಭೀರ ಮತ್ತು ಗಹನವಾದ ಯಾವುದೋ ಒಂದು ತತ್ವ ಅಥವ ಪದಾರ್ಥ ದೇವರ ಆಶ್ರಯದಲ್ಲಿತ್ತು ಎಂದು ಈ ಮಂತ್ರದ ಅರ್ಥವಾಗಿದ್ದು, ಜಡ ಪ್ರಕೃತಿಯ ಮೂಲ ಅಸ್ತಿತ್ವದ ಬಗ್ಗೆ ಹೇಳುತ್ತದೆ.
ಇನ್ನೊಂದು ಮಂತ್ರ ಹೇಳುತ್ತದೆ:
ನ ಮೃತ್ಯುರಾಸೀದಮೃತಂ ನ ತರ್ಹಿ ನ ರಾತ್ರ್ಯಾ ಅಹ್ನ ಆಸೀತ್ ಪ್ರಕೇತಃ |
ಅನೀದವಾತಂ ಸ್ವಧಯಾ ತದೇಕಂ ತಸ್ಮಾದ್ಧಾನ್ಯನ್ನ ಪರಃ ಕಿಂ ಚನಾಸ || (ಋಕ್. ೧೦.೧೨೯.೨)
    ಸಾವು ಇರಲಿಲ್ಲ, ಹಾಗಾಗಿ ಅಮರತ್ವವಿರಲಿಲ್ಲ, ರಾತ್ರಿ, ಹಗಲುಗಳು ಇರಲಿಲ್ಲ. ಆ ಒಂದು ತತ್ವ ಮಾತ್ರ ತನ್ನ ಬಲದಿಂದ ಗಾಳಿಯಿಲ್ಲದಿದ್ದರೂ ಪ್ರಾಣದಾಯಿಯಾಗಿತ್ತು, ಅದನ್ನು ಬಿಟ್ಟು ಬೇರೇನೂ ಇರಲಿಲ್ಲ ಎಂದು ಈ ಮಂತ್ರದ ಅರ್ಥ. ಪ್ರಳಯ, ಇತ್ಯಾದಿ ಕಾರಣಗಳಿಂದ ಜೀವಜಗತ್ತಿನ ಸರ್ವನಾಶವಾದರೆ ಜಗತ್ತಿನ ಸ್ಥಿತಿ ಹೀಗೆಯೇ ಇದ್ದಿರಬಹುದೇನೋ! ಆ ಸ್ಥಿತಿ ಹೇಗಿರಬಹುದು ಎಂದು ತಿಳಿಸುವ ಇನ್ನೊಂದು ಮಂತ್ರವಿದು:
ತಮ ಆಸೀತ್ ತಮಸಾ ಗೂಳ್ಹಮಗ್ರೇs ಪ್ರಕೇತಂ ಸಲಿಲಂ ಸರ್ವಮಾ ಇದಮ್ |
ತುಚ್ಛ್ಯೇನಾಭ್ಯವಿಹಿತಂ ಯದಾಸೀತ್ ತಪಸಸ್ತನ್ಮ ಹಿನಾಜಾಯತೈಕಮ್ || (ಋಕ್.೧೦.೧೨೯.೩)
     ಈ ಮೊದಲು ಇವೆಲ್ಲವೂ ರೂಪ ಲಕ್ಷಣಗಳಿಲ್ಲದೆ, ರಹಸ್ಯಮಯ ಅಂಧಕಾರದಲ್ಲಿ ದ್ರವರೂಪದಲ್ಲಿ (ಹರಿಯುವ ರೀತಿಯಲ್ಲಿ) ಇದ್ದಿತು. ದೇವನ ಕೃಪೆಯಿಂದ ಅದು ಒಂದಾಯಿತು, ಅರ್ಥಾತ್ ಹೊಸ ಸೃಷ್ಟಿಯಾಯಿತು. ಅಥರ್ವವೇದದ ಮಂತ್ರ ಹೇಳುತ್ತದೆ:
ಏಷಾ ಸನತ್ನೀ ಸನಮೇವ ಜಾತೈಷಾ ಪುರಾಣೀ ಪರಿ ಸರ್ವಂ ಬಭೂವ |
ಮಹಿ ದೇವ್ಯುಷಸೋ ವಿಭಾತೀ ಸೈಕೇನೈಕೇನ ಮಿಷತಾ ವಿ ಚಷ್ಟೇ || (ಅಥರ್ವ. ೧೦.೮.೩೦)
     ಅನಾದಿ ಕಾಲದಿಂದಲೇ ಇರುವ ಈ ಪ್ರಕೃತಿ ಸನಾತನವಾಗಿದ್ದು, ಎಲ್ಲಕ್ಕಿಂತಲೂ ಮೊದಲು ಇದ್ದುದಾಗಿದ್ದು, ದೇವರ ಇಚ್ಛೆಯಂತೆ ವಿವಿಧ ರೂಪಗಳಲ್ಲಿ ಪ್ರಕಟವಾಗುತ್ತದೆ, ಪ್ರತಿ ಜೀವಿಯ ಮೂಲಕವೂ ವ್ಯಕ್ತವಾಗುತ್ತದೆ. ಈ ಮಂತ್ರ ಜೀವಿಗಳ ಅಸ್ತಿತ್ವದ ಬಗ್ಗೆಯೂ ಬೆಳಕು ಚೆಲ್ಲಿದೆ. ಸೃಷ್ಟಿ, ಸ್ಥಿತಿ. ಲಯಗಳು ಜಗದ ನಿಯಮ. ಸೃಷ್ಟಿಯಾಗುತ್ತಿರುತ್ತದೆ, ಇರುತ್ತದೆ, ನಾಶವಾಗುತ್ತದೆ - ಈ ಚಕ್ರ ನಿರಂತರವಾಗಿ ಸುತ್ತುತ್ತಿರುತ್ತದೆ. ಜೀವಿಗಳ ಅಸ್ತಿತ್ವಕ್ಕೂ ಪ್ರಕೃತಿ ಇರಲೇಬೇಕು.
     ಈ ಬ್ರಹ್ಮಾಂಡದಲ್ಲಿ ಒಂದು ಸೂರ್ಯಮಂಡಲ ಮಾತ್ರ ಇಲ್ಲ, ಅದೆಷ್ಟು ಸೂರ್ಯಮಂಡಲಗಳು, ಭೂಮಿಗಳು ಇವೆಯೋ ಅನ್ನುವುದು ಎಣಿಕೆಗೆ ಮೀರಿದ್ದಾಗಿದೆ. ನಮ್ಮ ಕರ್ತವ್ಯ ಮರೆತರೆ ನಾವು ಇರುವ ಭೂಮಿಯ ವಿನಾಶಕ್ಕೆ ನಾವೇ ಕಾರಣರಾಗುತ್ತೇವೆ.. ನಮ್ಮ ಸ್ವಾರ್ಥಕ್ಕಾಗಿ ಅದೆಷ್ಟು ಗಿಡಮರಗಳನ್ನು ಕಡಿಯುತ್ತೇವೆ, ಅಂತರ್ಜಲ ಹೀರುತ್ತೇವೆ,, ಕೆರೆಕಟ್ಟೆಗಳನ್ನು ಮುಚ್ಚುತ್ತೇವೆ, ಕಾಡುಗಳನ್ನು ನಾಶ ಮಾಡಿ ಸಹಜೀವಿಗಳ ಜೀವನಕ್ಕೆ ನೆಲೆಯಿಲ್ಲದಂತೆ ಮಾಡುತ್ತೇವೆ, ಗುಡ್ಡ-ಬೆಟ್ಟಗಳನ್ನು ನೆಲಸಮ ಮಾಡುತ್ತೇವೆ, ಗಗನಚುಂಬಿ ಕಟ್ಟಡಗಳನ್ನು ಕಟ್ಟುತ್ತೇವೆ. ಭೂಮಿತಾಯಿ ಎಂದು ಬಾಯಿತುಂಬಾ ಹೇಳುತ್ತೇವೆ, ಅದರ ಮೇಲೆ ಮಾಡಬಾರದ ಅತ್ಯಾಚಾರ ಮಾಡುತ್ತೇವೆ. ನಮ್ಮ ಮಕ್ಕಳ ಕಾಲಕ್ಕಾದರೂ ಭೂಮಿತಾಯಿಯನ್ನು ಈಗ ಇರುವಂತೆ  ಗೌರವಿಸುವುದು, ಉಳಿಸುವುದು, ಸಂರಕ್ಷಿಸುವುದು ಮಕ್ಕಳಾದ ನಮ್ಮ ಕರ್ತವ್ಯವಾಗಿದೆ.
     ನೋಡುವ ಕಣ್ಣುಗಳಿದ್ದರೆ, ಕೇಳುವ ಕಿವಿಗಳಿದ್ದರೆ ಅತ್ಯಂತ ಕ್ಷಮಾಶೀಲ ಧರಿತ್ರಿ ತನ್ನ ಮೇಲೆ ಮಾನವನಿಂದ  ಆದ, ಆಗುತ್ತಿರುವ ಅತ್ಯಾಚಾರಗಳಿಗಾಗಿ ರೋದಿಸುತ್ತಿರುವುದು ಕಾಣುತ್ತದೆ, ಕೇಳುತ್ತದೆ. ಆದರೆ ಆ ರೋದನ ತನಗಾಗಿ ಅಲ್ಲ, ತನ್ನನ್ನು ಆಶ್ರಯಿಸಿರುವ ಜೀವಸಂಕುಲಕ್ಕಾಗಿ ಎಂಬುದನ್ನು ಸಾಧಕ ಮಾತ್ರ ಅರಿಯಬಲ್ಲ!
-ಕ.ವೆಂ.ನಾಗರಾಜ್.
***************
ದಿನಾಂಕ 21.10.2015ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ: