ಹೀಗೆ ಊಹಿಸಿಕೊಳ್ಳೋಣ, ಒಂದೊಮ್ಮೆ ಭೂಮಿ ನೀರಿನಲ್ಲಿ ಮುಳುಗಿ ಕರಗಿಹೋದರೆ? ನೀರು ಬೆಂಕಿಯಿಂದ ಒಣಗಿ ಆವಿಯಾದರೆ? ಬೆಂಕಿಯನ್ನು ಗಾಳಿ ನಂದಿಸಿದರೆ? ಗಾಳಿ ಆಕಾಶದಲ್ಲಿ ಐಕ್ಯವಾದರೆ? ಕೊನೆಯಲ್ಲಿ ಉಳಿಯುವುದು ಆಕಾಶ ಮಾತ್ರ, ಆಕಾಶ, ಆಕಾಶ, ಎಲ್ಲೆಲ್ಲೂ ಆಕಾಶ, ಅಷ್ಟೆ! ಪ್ರಳಯ ಎಂಬ ಕಲ್ಪನೆ ಸಹ ಇದನ್ನೇ ಹೇಳುತ್ತದೆ. ಅಂತಿಮವಾಗಿ ಉಳಿಯುವ ಆಕಾಶ ಮಾತ್ರ ಕಾಣುವ ಸತ್ಯ, ಅತ್ಯಂತ ಗ್ರಾಹ್ಯ ಸಂಗತಿ. ಅದು ಎಲ್ಲವನ್ನೂ ಒಳಗೊಳ್ಳಬಲ್ಲ, ಸೇರಿಸಿಕೊಳ್ಳಬಲ್ಲ, ಎಲ್ಲೆಲ್ಲೂ ಇರುವಂತಹ ವಿಶಾಲ ಶಕ್ತಿಯಾಗಿರುತ್ತದೆ. ಹೀಗಾಗಿ ಇದು ಸರ್ವವ್ಯಾಪಿ, ಸರ್ವಶಕ್ತ ಪರಮಾತ್ಮನನ್ನು ಹೋಲುತ್ತದೆ.
ಆಕಾಶದ ಮಹತ್ವ ಅರಿವಾಗುವುದು ಅದು ಇರುವುದರಿಂದಲೇ! ಎಲ್ಲದರ ಅಸ್ತಿತ್ವಕ್ಕೆ ಅವಕಾಶವಾಗಿರುವುದು ಆಕಾಶದಿಂದಲೇ. ಪ್ರತಿಯೊಂದೂ ಪರಿಣಾಮಸ್ವರೂಪವಾಗಿ ಆಕಾಶದಿಂದಲೇ ಬರುತ್ತದೆ. ಸೂರ್ಯ, ಚಂದ್ರ, ನಕ್ಷತ್ರಗಳು, ಗ್ರಹಗಳು, ಗುಡುಗು, ಸಿಡಿಲು, ಇಂತಹದು ಇದೆ, ಇಂತಹದು ಇಲ್ಲವೆನ್ನುವಂತಿಲ್ಲದೆ ಪ್ರತಿಯೊಂದಕ್ಕೂ ಅವಕಾಶ ಮಾಡಿಕೊಟ್ಟಿರುವುದು ಆಕಾಶವೇ. ಇರಲು ಜಾಗವಿರದಿರುತ್ತಿದ್ದರೆ ನಾವು ಎಲ್ಲಿರುತ್ತಿದ್ದೆವು? ನಮ್ಮ ಸುಖ-ದುಃಖಗಳು ಎಲ್ಲಿರುತ್ತಿದ್ದವು? ಆಕಾಶವಿರದಿದ್ದರೆ ಯಾವುದೇ ವಸ್ತುಗಳು ಇರುತ್ತಿರಲಿಲ್ಲ, ಸುಖ-ದುಃಖಗಳ ಅನುಭವವೂ ನಮಗೆ ಇರುತ್ತಿರಲಿಲ್ಲ. ಜೀವನದಲ್ಲಿ ನಾವು ಅನುಭವಿಸುವ ನವರಸಗಳಿಗೂ, ತೃಪ್ತಿ, ಅತೃಪ್ತಿಗಳಿಗೂ ಆಕಾಶ ಕಾರಣವೆಂದರೆ ಅತಿಶಯೋಕ್ತಿಯಲ್ಲ. ಭೂಮಿಯಲ್ಲಿನ ಗಿಡ-ಮರಗಳು ಬೆಳೆಯಲು ಆಕಾಶವಿರುವುದರಿಂದಲೇ ಸಾಧ್ಯವಾಗಿದೆ. ಆಕಾಶದ ಕುರಿತು ಎಷ್ಟು ಹೆಚ್ಚು ವಿವರಣೆ ನೀಡಿದರೂ ಅದು ಕಡಿಮೆಯೇ ಆಗುತ್ತದೆ, ಏನೋ ಕೊರತೆ ಇದ್ದೇ ಇರುತ್ತದೆ. ಅದನ್ನು ವಿವರಿಸುವುದು ಕಷ್ಟ. ನಮ್ಮ ಮೆದುಳು ಗ್ರಹಿಸಬಹುದಾದ ಅತ್ಯಂತ ಕೊನೆಯ ಸಂಗತಿ ಎಂದರೆ ಆಕಾಶ ಮಾತ್ರ. ಅದರ ಆಚೆಗೆ ಮೆದುಳು ಚಿಂತಿಸಲು ಸಾಧ್ಯವಿದೆಯೇ? ಅದು ಹೀಗೆ ಎಂದು ಹೇಳಲು ಸಾಧ್ಯವಿದೆಯೇ?
ಆಗಸದ ಬಣ್ಣವದು ತೋರುವಂತಿಹುದೇನು
ನೀಲಿ ಕೆಂಪು ಕಪ್ಪಾಗಿ ತೋರುವುದೆ ಸೊಗಸು |
ಅರಿತವರು ಯಾರಿಹರು ಗಗನದ ನಿಜಬಣ್ಣ
ದೇವನೆಂತಿಹನೆಂದು ಗೊತ್ತಿಹುದೆ ಮೂಢ? ||
ಆಕಾಶ ಅಂದರೇನು? ಗೊತ್ತಿಲ್ಲ. ಆಕಾಶ ಎಷ್ಟು ದೊಡ್ಡದು? ಗೊತ್ತಿಲ್ಲ. ಆಕಾಶ ಹೇಗಿದೆ? ಗೊತ್ತಿಲ್ಲ. ಚಂದ್ರ ಎಲ್ಲಿದ್ದಾನೆ? ಆಕಾಶದಲ್ಲಿದ್ದಾನೆ. ಭೂಮಿ ಎಲ್ಲಿದೆ? ಅದೂ ಆಕಾಶದಲ್ಲಿದೆ. ಆಕಾಶ ಮೇಲೆ ಮಾತ್ರ ಇಲ್ಲ, ಎಲ್ಲೆಲ್ಲೂ ಇದೆ. ಎಲ್ಲೆಲ್ಲೂ ಅಂದರೆ ಎಲ್ಲೆಲ್ಲೂ! ಈ ಜಗತ್ತು/ವಿಶ್ವ/ಬ್ರಹ್ಮಾಂಡ ಎಂದರೆ ಕೇವಲ ಒಂದು ಭೂಮಿಯಲ್ಲ, ಒಂದು ಚಂದ್ರನಲ್ಲ, ಒಂದು ಸೂರ್ಯನಲ್ಲ. ಇಂತಹ ಅಸಂಖ್ಯ ಭೂಮಿ, ಸೂರ್ಯ, ಚಂದ್ರ, ಎಣಿಕೆಗೆ ಸಿಕ್ಕದ ಬೃಹತ್ ನಕ್ಷತ್ರಗಳ ಬೃಹತ್ ಸಮೂಹ ಇದರಲ್ಲಿದೆ. ಅಲ್ಲೆಲ್ಲಾ ಆವರಿಸಿರುವುದು ಈ ಆಕಾಶವೇ! ಅಂದರೆ ನಾವೂ ಆಕಾಶದಲ್ಲೇ ಇದ್ದೇವೆ. ಆಕಾಶ ನಮ್ಮನ್ನು ಹೊಂದಿಕೊಂಡೇ ಇದೆ! ನಾವಷ್ಟೇ ಏಕೆ, ಎಲ್ಲಾ ಚರಾಚರ, ಜೀವ, ನಿರ್ಜೀವ ವಸ್ತುಗಳನ್ನೂ ಆಕಾಶ ಆವರಿಸಿದೆ. ಅಂದರೆ ಆಕಾಶ ಸರ್ವವ್ಯಾಪಿ. ಅದು ಇಲ್ಲದ ಸ್ಥಳವೇ ಇಲ್ಲ. ಜೀವಿಗಳ ದೇಹ ಪಂಚಭೂತಗಳಿಂದ -ಜಲ, ವಾಯು, ಅಗ್ನಿ, ಭೂಮಿ ಮತ್ತು ಆಕಾಶ- ಕೂಡಿದ್ದುದಾಗಿದ್ದು, ಆಕಾಶ ನಮ್ಮೊಳಗೂ ಇದೆ, ಹೊರಗೂ ಇದೆ. ಒಳಗೂ ಇರುವ, ಹೊರಗೂ ಇರುವ, ಎಲ್ಲೆಲ್ಲೂ ಇರುವ, ಅದು ಇಲ್ಲದ ಸ್ಥಳವೇ ಇರದಿರುವುದು ಆಕಾಶ. ನಾವು ಆಕಾಶವನ್ನು ಕಾಣದಿರಬಹುದು. ಆದರೆ ಆಕಾಶ ಸದಾ ನಮ್ಮನ್ನು ನೋಡುತ್ತಿರುತ್ತದೆ. ಆಕಾಶದ ಕಣ್ಣು ತಪ್ಪಿಸಿ ಯಾರಾದರೂ ಏನಾದರೂ ಮಾಡಲು ಸಾಧ್ಯವೇ? ಏನಾದರೂ ನಡೆಯಲು ಸಾಧ್ಯವೇ? ಪರಮಾತ್ಮನನ್ನು ವರ್ಣಿಸುವಾಗ ಅವನು ಸರ್ವವ್ಯಾಪಿ, ಅವನಿಲ್ಲದ ಸ್ಥಳವೇ ಇಲ್ಲ, ಅವನು ಒಳಗೂ ಇದ್ದಾನೆ, ಹೊರಗೂ ಇದ್ದಾನೆ, ಎಲ್ಲೆಲ್ಲೂ ಇದ್ದಾನೆ, ಇತ್ಯಾದಿ ಹೇಳುವುದನ್ನು ಕೇಳಿದ್ದೇವೆ. ಅವನ ಗಮನಕ್ಕೆ ಬಾರದಂತೆ ಏನೂ ಜರುಗಲು ಸಾಧ್ಯವಿಲ್ಲವೆಂದು ಹೇಳುವುದನ್ನು ಕೇಳಿದ್ದೇವೆ. ಈ ವಿಶ್ವ ಬ್ರಹ್ಮಾಂಡವನ್ನು ನಿಯಂತ್ರಿಸುವ ವಿರಾಟ್ ಶಕ್ತಿಯ ಕುರಿತು ವೇದದಲ್ಲಿ ಹೀಗೆ ಹೇಳಿದೆ: ತದೇಜತಿ ತನ್ನೈಜತಿ ತದ್ದೂರೇ ತದ್ವಂತಿಕೇ | ತದಂತರಸ್ಯ ಸರ್ವಸ್ಯ ಅದು ಸರ್ವಸ್ಯಾಸ್ಯ ಬಾಹುತಃ || (ಯಜು. ೪೦.೫.) ಅದು ವಿಶ್ವಕ್ಕೆ ಗತಿ ನೀಡುತ್ತದೆ, ಅದು ಸ್ವತಃ ಚಲಿಸುವುದಿಲ್ಲ, ಅದು ದೂರದಲ್ಲಿದೆ, ಅದೇ ಹತ್ತಿರದಲ್ಲಿಯೂ ಇದೆ. ಅದು ಇದೆಲ್ಲದರ ಒಳಗೂ ಇದೆ, ಇದೆಲ್ಲದರ ಹೊರಗೂ ಇದೆ ಎಂಬುದು ಇದರ ಅರ್ಥ. ಈ ಎಲ್ಲಾ ಗುಣಗಳು ಆಕಾಶಕ್ಕೆ ಇರುವುದರಿಂದ ಆಕಾಶವನ್ನು ಕಣ್ಣಿಲ್ಲದೇ ಕಾಣಬಲ್ಲ 'ದೇವರ ಕಣ್ಣು' ಎನ್ನೋಣವೇ?
ಆಕಾಶ ಇಂತಹ ಸ್ಥಳದಲ್ಲಿ ಇದೆ, ಇಂತಹ ಸ್ಥಳದಲ್ಲಿ ಇರುವುದಿಲ್ಲವೆಂದು ಹೇಳಲಾಗುವುದಿಲ್ಲ. ಜೀವಿಗಳು ವಾಸವಿರಲು ಸಾಧ್ಯವೇ ಇರದ ಸ್ಥಳದಲ್ಲೂ ಅದಿದೆ, ಧಗಧಗಿಸುವ ಅಗ್ನಿಯ ಜೊತೆಗೂ ಇದೆ, ಭೋರ್ಗರೆಯುವ ಸಮುದ್ರ, ಸಾಗರಗಳಿರುವಲ್ಲೂ ಇದೆ. ಆಕಾಶವನ್ನು ಬೆಂಕಿ ಸುಡಲಾರದು, ನೀರು ತೋಯಿಸಲಾರದು, ಅದನ್ನು ಯಾವುದೇ ಆಯುಧದಿಂದ ಕತ್ತರಿಸಲಾಗದು, ಅದನ್ನು ಯಾರೂ ಏನೂ ಮಾಡಲಾರರು. ಬ್ರಹ್ಮಾಂಡದ ಸೃಷ್ಟಿಯ ಜೊತೆಗೂ ಅದು ಇರುತ್ತದೆ, ಪ್ರಳಯ, ವಿನಾಶ ಕಾಲದಲ್ಲೂ ಅದು ಇರುತ್ತದೆ. ಅದಕ್ಕೆ ಪ್ರಾರಂಭವಿಲ್ಲ, ಕೊನೆಯಿಲ್ಲ, ಅರ್ಥಾತ್ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪರಮಾತ್ಮನನ್ನೂ ಹೀಗೆಯೇ ಇದ್ದಾನೆ ಅನ್ನುತ್ತೇವೆ. ದೇವರ ವಿಶ್ವರೂಪ ದರ್ಶನವೆಂದರೆ ಆಕಾಶವೇ ಅಲ್ಲವೇ? ಒಳಗಣ್ಣಿದ್ದು ತೆರೆದು ನೋಡಬಲ್ಲವರು ಈ ವಿಶ್ವರೂಪವನ್ನು ಅವರ ಶಕ್ತ್ಯಾನುಸಾರ ಕಂಡಾರು. ನಿಜವಾಗಿ ದೇವರ ಪ್ರತಿನಿಧಿ ಎಂದು ಆಕಾಶವನ್ನು ಹೆಸರಿಸಬಹುದೇ ಹೊರತು, ಯಾವುದೇ ವ್ಯಕ್ತಿ ಅಥವ ಜೀವಿಯನ್ನು ಇಂತಹ ಅಗಾಧ ಶಕ್ತಿಯ ಪ್ರತಿನಿಧಿ ಎಂದು ಹೇಳುವುದು, ದೇವರ ಮಗ ಅನ್ನುವುದು, ದೇವರ ರೂಪದಲ್ಲಿ ಕಾಣುವುದು ಸಮಂಜಸವೆನಿಸುವುದಿಲ್ಲ. ಎಲ್ಲರಲ್ಲೂ 'ಅವನ' ಅಂಶವಿರುವುದರಿಂದ ಆ ವಿಶಾಲಾರ್ಥದಲ್ಲಿ ತೆಗೆದುಕೊಳ್ಳಬಹುದೇ ಹೊರತು, ಯಾರನ್ನೇ ಆಗಲಿ ದೇವರಂತೆ ಭಾವಿಸುವುದು ಸೂಕ್ತವಲ್ಲ. ನಾಶವಿರದ ಭಗವಂತನನ್ನು ನಾಶವಾಗಬಹುದಾದ ಸಂಗತಿಗಳಲ್ಲಿ ಗುರುತಿಸುವುದು ಎಷ್ಟರ ಮಟ್ಟಿಗೆ ಸರಿಯಾದೀತು? ಬೇಕಾದರೆ ದೇವಮಾನವರು, ಮಹಿಮಾವಂತರು, ವಿಶೇಷ ಶಕ್ತಿಯುಳ್ಳವರು, ಹೀಗೆ ಭಾವಿಸಬಹುದು.
ತಿಳಿದವರು ಯಾರಿಹರು ಆಗಸದ ನಿಜಬಣ್ಣ
ತುಂಬುವರು ಯಾರಿಹರು ಆಗಸದ ಶೂನ್ಯ |
ಆಗಸದ ನಿಜತತ್ವ ಅರಿತವರು ಯಾರು?
ಗಗನದ ಗಹನತೆಗೆ ಮಿತಿಯೆಲ್ಲಿ ಮೂಢ ||
ಆಕಾಶವನ್ನು ಕಾಣಲಾಗುವುದಿಲ್ಲ, ಆದುದರಿಂದ ಅದನ್ನು ನಂಬುವುದಿಲ್ಲ ಎನ್ನಬಹುದೇ? ಆಕಾಶವೇ ಇಲ್ಲವೆಂದರೆ ಅದು ಇಲ್ಲವಾಗುತ್ತದೆಯೇ? ಆಕಾಶದ ಗುಣ ಹೇಗಿದೆ? ಅದಕ್ಕೆ ಗುಣವಿಲ್ಲ, ನಿರ್ಗುಣ. ಅದಕ್ಕೆ ಮಮಕಾರವೂ ಇಲ್ಲ, ಅಹಂಕಾರವೂ ಇಲ್ಲ. ಭೇದ-ಭಾವ ಮಾಡುವುದೇ ಇಲ್ಲ. ಜಾತಿ, ಮತ, ಪಂಥಗಳ ಕಟ್ಟಿಲ್ಲ. ಆ ದೇಶ, ಈ ದೇಶ ಅನ್ನುವುದು ಇಲ್ಲ. ಹಿಂದೆ ಹೇಗಿತ್ತೋ ಈಗಲೂ ಹಾಗೆಯೇ ಇದೆ, ಮುಂದೆಯೂ ಹೀಗೆಯೇ ಇರುತ್ತದೆ. ಇದು ಸಾರ್ವಕಾಲಿಕ, ಸಾರ್ವದೇಶಿಕ, ಸಾರ್ವಭೌಮಿಕ ಸತ್ಯ. ಕೆಟ್ಟವರು, ಒಳ್ಳೆಯವರು, ಜೀವಿ, ನಿರ್ಜೀವಿ ಎಂದು ಎಣಿಸುವುದೇ ಇಲ್ಲ. ಯಾರು ಏನೇ ಮಾಡಿದರೂ ಅಡ್ಡಿಪಡಿಸುವುದಿಲ್ಲ, ಪ್ರೋತ್ಸಾಹಿಸುವುದೂ ಇಲ್ಲ. ಎಲ್ಲಾ ಆಗು-ಹೋಗುಗಳಿಗೆ, ಕ್ರಿಯೆಗಳಿಗೆ ಅದು ಕೇವಲ ಸಾಕ್ಷಿಯಾಗಿರುತ್ತದೆ. ಖಾಲಿ ಆಕಾಶವನ್ನು ಯಾವುದರಿಂದಲಾದರೂ ತುಂಬಿ ಭರ್ತಿ ಮಾಡಲು ಸಾಧ್ಯವಿದೆಯೇ? ಇಲ್ಲ, ಎಷ್ಟು ತುಂಬಿದರೂ, ಏನನ್ನು ತುಂಬಿದರೂ ಅದು ಭರ್ತಿಯಾಗುವುದೇ ಇಲ್ಲ. ಹಾಗೆಯೇ ನಾವು ಆಕಾಶವನ್ನು ಹೇಗೆ ಅರ್ಥ ಮಾಡಿಕೊಳ್ಳಲು ಹೊರಟರೂ ಅದು ಆಕಾಶವಾಗಿಯೇ, ಗೂಢವಾಗಿಯೇ ಉಳಿಯುತ್ತದೆ. ಆಕಾಶ ನಮ್ಮನ್ನು ಅರಗಿಸಿಕೊಳ್ಳುತ್ತದೆ. ನಾವು ಆಕಾಶವನ್ನಲ್ಲ. ಆಕಾಶ ನಮ್ಮ ಅಹಂ, ಮನಸ್ಸು, ಯೋಚನೆಗಳು, ಚಿಂತನೆಗಳು, ಜ್ಞಾನ, ಅಜ್ಞಾನ, ಎಲ್ಲವನ್ನೂ, ಎಲ್ಲಾ ಅಂದರೆ ಎಲ್ಲವನ್ನೂ, ನುಂಗಿ ನೀರು ಕುಡಿಯಬಲ್ಲದು, ಅರ್ಥಾತ್ ಅರಗಿಸಿಕೊಳ್ಳಬಲ್ಲದು. ಪರಮಾತ್ಮ 'ನಿರ್ಮಮೋ ನಿರಹಂಕಾರಃ' ಎಂಬುದನ್ನು ತೋರ್ಪಡಿಸಿಕೊಂಡಿರುವುದು ಆಕಾಶದಿಂದಲೇ. ಆಕಾಶವನ್ನು ತೃಪ್ತಿ ಪಡಿಸಲು ಯಾವ ಪೂಜೆ ಮಾಡಬೇಕು? ಯಾವ ಪ್ರಾಣಿಯ ಬಲಿ ಕೊಡಬೇಕು? ಯಾವ ನೈವೇದ್ಯ ಇಡಬೇಕು? ಏನೂ ಮಾಡಬೇಕಿಲ್ಲ. 'ಒಳ್ಳೆಯ ಕೆಲಸಕ್ಕೆ ಒಳ್ಳೆಯ ಫಲ, ಕೆಟ್ಟದ್ದಕ್ಕೆ ಕೆಟ್ಟದ್ದು' ಎಂಬುದು ಜ್ಞಾನಿಗಳು, ಸಾಧಕರು ಹೇಳುವ ಮಾತು. ಪುನರ್ಜನ್ಮವನ್ನು ನಂಬದವರೂ ಸಹ ದೇವರು ಒಂದು 'ನಿರ್ಣಾಯಕ ದಿನ'ದಂದು ಎಲ್ಲಾ ಜೀವಿಗಳಿಗೆ ಅವರ ಕರ್ಮಕ್ಕನುಸಾರವಾಗಿ ಫಲ ಕೊಡುತ್ತಾನೆಂದು ನಂಬುತ್ತಾರೆ. ಪುನರ್ಜನ್ಮವನ್ನು ನಂಬುವವರಿಗೆ ಪೂರ್ವಾರ್ಜಿತ ಕರ್ಮದ ಅನುಸಾರ ಮುಂದಿನ ಜನ್ಮವೆಂದು ಹೇಳುತ್ತಾರೆ. ಒಟ್ಟಿನಲ್ಲಿ ನಾವು 'ಒಳ್ಳೆಯ' ರೀತಿ ಬಾಳಬೇಕೆಂಬುದು ನೀತಿ. ಹಾಗೆ ಮಾಡಲು ಏನು ಅಡ್ಡಿ? ಆಕಾಶವನ್ನು ಕೃತಕ ಭಯ, ಭಕ್ತಿಗಳಿಂದ ತೃಪ್ತಿ ಪಡಿಸಲು ಸಾಧ್ಯವಿಲ್ಲ. ಅದೇ ರೀತಿ ದೇವರನ್ನೂ ಭಯ-ಭಕ್ತಿಗಳಿಂದ ತೃಪ್ತಿಪಡಿಸಿ ನಮ್ಮ ಇಚ್ಛೆ ಈಡೇರಿಸಿಕೊಳ್ಳುವೆವೆಂಬುದು ಭ್ರಮೆ ಎಂದು ಆಕಾಶ ಸಾರುತ್ತಿದೆ. ನಮ್ಮ ಕಷ್ಟ-ನಷ್ಟಗಳಿಗೆ, ಒಳಿತು-ಕೆಡಕುಗಳಿಗೆ ದೇವರು ಕಾರಣನಲ್ಲ, ನಾವೇ ಎಂಬುದನ್ನು 'ಆಕಾಶ' ತನ್ನ ಇರುವಿಕೆಯ ರೀತಿಯಿಂದ ಹೇಳುತ್ತಿದೆ.
ಸಂದಿಗ್ಧ ಪರಿಸ್ಥಿತಿಯಲ್ಲಿ ಕೈಗಳನ್ನು ಮೇಲೆತ್ತಿ 'ದೇವರೇ ಕಾಪಾಡಪ್ಪಾ' ಅನ್ನುತ್ತೇವೆ. ಅಂದರೆ ದೇವರು 'ಮೇಲೆ' ಇದ್ದಾನೆ ಎಂದು ಅಂದುಕೊಳ್ಳುತ್ತೇವೆ, ಆಕಾಶವನ್ನೂ 'ಮೇಲೆ' ಇದೆ ಎಂದು ಭಾವಿಸಿದಂತೆ! ಆಕಾಶವನ್ನು ಬೆಟ್ಟ-ಗುಡ್ಡಗಳ ಮೇಲೆ, ರಾತ್ರಿಯಲ್ಲಿ ಮಿನುಗುವ ಚಂದ್ರ-ತಾರೆಗಳ ಹಿನ್ನೆಲೆಯಲ್ಲಿ ಕಾಣುವ ಸುಂದರ ದೃಷ್ಯಗಳ ರೀತಿಯಲ್ಲಿ ಕಾಣುವ ನಾವು ದೇವರೂ ವೈಕುಂಠ, ಕೈಲಾಸ, ಇತ್ಯಾದಿ ಬೇರೆಯೇ ಲೋಕಗಳಲ್ಲಿದ್ದಾನೆಂದು ಭಾವಿಸುತ್ತೇವೆ. ಕಾಶಿ, ಬದರಿ, ಅಯೋಧ್ಯೆ, ಕನ್ಯಾಕುಮಾರಿ, ಮೆಕ್ಕಾ, ಜೆರುಸಲೇಮ್, ಇತ್ಯಾದಿ ಸ್ಥಳಗಳು ದೇವರು ಇರುವ ವಿಶೇಷ ಸ್ಥಳಗಳೆಂದುಕೊಳ್ಳುತ್ತೇವೆ. ಆಕಾಶವನ್ನು ಮೇಲೆ ಮಾತ್ರ ಇದೆ ಎಂದು ಅಂದುಕೊಳ್ಳುವ ನಾವು ಅದು ನಮ್ಮೊಡನೆಯೇ ಇದೆ ಎಷ್ಟು ಜನ ಭಾವಿಸುತ್ತೇವೆ? ಅಶನ, ವಸನ, ವಸತಿಗಳನ್ನು ಕರಣಿಸುವ ಭೂಮಿ ನಮ್ಮ ತಾಯಿಯಾದರೆ, ಸದಾ ನಮ್ಮೊಡನಿದ್ದು ನಮ್ಮನ್ನು ಗಮನಿಸುವ ಆಕಾಶ ನಮ್ಮ ತಂದೆ! ನಮ್ಮೊಂದಿಗಿದ್ದರೂ ತನ್ನ ಇರುವನ್ನು ಪ್ರಕಟಿಸದ, ನಮ್ಮ ಯಾವುದೇ ಚಟುವಟಿಕೆಗಳಿಗೆ ಅಡ್ಡಿಪಡಿಸದ, ಜಗತ್ತನ್ನು ಅನುಭವಿಸಲು ಅವಕಾಶ ಮಾಡಿಕೊಟ್ಟಿರುವ ಆಗಸಕ್ಕಿಂತ ಹೆಚ್ಚು ವಾತ್ಸಲ್ಯಮಯಿ ತಂದೆ ಬೇರೆ ಯಾರಾದರೂ ಇರಲು ಸಾಧ್ಯವೇ?
ನಾಟಕದಲ್ಲಿ ಪಾತ್ರಧಾರಿಗಳು ನಾಟಕ ಆಡುವಾಗ ಪಾತ್ರಗಳೇ ಆಗಿ ಅನುಭವಿಸಿ ಆಡಿದರೂ ನಾಟಕ ಮುಗಿದ ನಂತರ ವಾಸ್ತವ ವ್ಯಕ್ತಿಗಳಾಗುತ್ತಾರೆ. ಆದರೆ ನಿಜ ಜೀವನನಾಟಕದಲ್ಲಿ? ಈ ನಾಟಕರಂಗದ ಅದ್ಭುತ ಪರದೆ ಆಕಾಶ! ಈ ಪರದೆಯ ಮುಂದೆ ನಾವು-ನೀವೆಲ್ಲರೂ ಪಾತ್ರಧಾರಿಗಳೇ. ನಮ್ಮ ಪಾತ್ರಗಳನ್ನು ನಾವು ಎಷ್ಟು ತನ್ಮಯರಾಗಿ ನಿರ್ವಹಿಸುತ್ತೇವೆಂದರೆ ನಾವು ಆ ಪಾತ್ರಗಳೇ ಆಗಿಬಿಡುತ್ತೇವೆ. ನಾವು ನಿಜವಾಗಿ 'ಯಾರು' ಎಂದು ತಲೆಕೆಡಿಸಿಕೊಳ್ಳುವುದೇ ಇಲ್ಲ, ಮತ್ತು ಪಾತ್ರವಲ್ಲದೆ ನಾವು ಬೇರೆ ಎಂದು ಅಂದುಕೊಳ್ಳುವುದೇ ಇಲ್ಲ. ಈ ಜೀವನ ನಾಟಕದಲ್ಲಿ ನಮ್ಮದು ಕೆಲ ಸೀಮಿತ ಅವಧಿಗೆ ಬಂದು ಹೋಗುವ ಪಾತ್ರವಾಗಿದ್ದರೂ ನಾವು ಶಾಶ್ವತರೆಂದು ಅಂದುಕೊಂಡು, ನಮ್ಮ ಇರುವಿಕೆಯನ್ನು ಶಾಶ್ವತಗೊಳಿಸಲು, ನಮ್ಮತನವನ್ನು ಅಚ್ಚೊತ್ತಲು ಜೀವನ ಪೂರ್ತಿ ತೊಡಗಿಕೊಳ್ಳುತ್ತೇವೆ!
ಒಂದು ಮೂಲವಸ್ತು ಯಾವ ಕಾಲಕ್ಕೂ ನಾಶವಾಗುವುದಿಲ್ಲ, ರೂಪಾಂತರ ಮಾತ್ರ ಹೊಂದುವುದೆಂದು ವಿಜ್ಞಾನ ಹೇಳುತ್ತದೆ. ನಮ್ಮ ದೇಹ ಪಂಚಭೂತಗಳಿಂದ ಆಗಿದ್ದು ಆ ದೇಹಕ್ಕೆ ಅರ್ಥ ಕೊಡುವ ಒಂದು ಶಕ್ತಿ ಜೀವಾತ್ಮ. ಸತ್ತ ನಂತರದಲ್ಲಿ ದೇಹ ಪಂಚಭೂತಗಳಲ್ಲಿ ಸೇರಿ ಹೋಗುತ್ತದೆ. ಜೀವಾತ್ಮ? ಅದಕ್ಕೆ ನಾಶವಿಲ್ಲ. ನಂತರದಲ್ಲಿ ಅದು ಹೊಸ ಶರೀರವನ್ನು ಕಂಡುಕೊಳ್ಳುತ್ತದೆ ಎಂದು ತಿಳಿದವರು ಹೇಳುತ್ತಾರೆ. ವೈಜ್ಞಾನಿಕವಾಗಿ ಚಿಂತಿಸಿದರೂ ಪಂಚಭೂತಗಳಿಗೆ ಸೇರದ ಜೀವಾತ್ಮ ಯಾವುದಾದರೂ ರೂಪದಲ್ಲಿ ಇರಲೇಬೇಕಲ್ಲವೆ? ಈ ಎಲ್ಲಾ ಕ್ರಿಯೆಗಳಿಗೆ ಸಾಕ್ಷಿಯಾಗುವುದು ಆಕಾಶವೊಂದೇ! ಇದ್ದದ್ದು ಆಕಾಶದಲ್ಲಿ, ಹೋದದ್ದು ಆಕಾಶದಲ್ಲಿ, ಬರುವುದೂ ಆಕಾಶದಲ್ಲಿ! ಇದನ್ನು ವೈಜ್ಞಾನಿಕ ಆಸ್ತಿಕವಾದವೆನ್ನಬಹುದು.
Sujit Shetty
ಪ್ರತ್ಯುತ್ತರಅಳಿಸಿದೇವನಿಗೆ ಸಮಾನಾರೂ ಇಲ್ಲ..ಆದರೆ ದೇವನಿಲ್ಲದ ಜಾಗವೂ ಇಲ್ಲ..smile emoticon