ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಗುರುವಾರ, ಜುಲೈ 27, 2017

ಸತ್ಯವೆಂದರೆ . . .


ನಂಬಿದ್ದೆ ಸರಿಯೆಂಬ ಜಿಗುಟುತನವೇಕೆ
ನಿಜವ ನಂಬಲು ಹಿಂಜರಿಕೆಯೇಕೆ |
ಜಿಜ್ಞಾಸೆಯಿರಲಿ ಹೇಗೆ ಏನು ಏಕೆ
ಹಿರಿಯ ನಿಜವರಿತು ನಡೆವ ಮೂಢ ||
     ಸತ್ಯ ಎಂದರೆ ಏನು? ಸಾಮಾನ್ಯ ಅರ್ಥವೆಂದರೆ ವಾಸ್ತವಕ್ಕೆ ಅನುಗುಣವಾಗಿರುವುದು, ಒಂದು ಆದರ್ಶ ಅಥವ ಮಾನದಂಡ ಅಥವ ಮೂಲವಿಚಾರಕ್ಕೆ ಅನುರೂಪವಾಗಿರುವುದು ಎನ್ನಬಹುದು. ಇದಕ್ಕೆ ವಿರುದ್ಧವಾದುದು ಸುಳ್ಳು. ಸತ್ಯದ ನಡಿಗೆ ನಿಧಾನ. ಸತ್ಯ ಒಂದು ಹೆಜ್ಜೆ ಮುಂದಿಡುವಷ್ಟರಲ್ಲಿ, ಸುಳ್ಳು ಪ್ರಪಂಚವನ್ನು ಒಂದು ಸುತ್ತು ಸುತ್ತಿ ಬಂದುಬಿಡಬಹುದು. ಸುಳ್ಳನ್ನು ಸಾವಿರ ಸಲ ಹೇಳಿದರೆ ಅದು ಸತ್ಯವಾಗುತ್ತದೆ ಎಂಬುದು ಗೊಬೆಲ್ಸ್ ಸಿದ್ಧಾಂತ. ಆದರೆ, ಸುಳ್ಳನ್ನು ಸತ್ಯವೆಂದು ನಂಬಿಸಬಹುದಷ್ಟೆ ಹೊರತು, ನಿಜವಾದ ಸತ್ಯ ಸತ್ಯವಾಗಿಯೇ ಉಳಿದಿರುತ್ತದೆ ಎಂಬುದೇ ಸತ್ಯ!
     ಸತ್ಯವನ್ನು ವಿವಿಧ ಹಿನ್ನೆಲೆಗಳಲ್ಲಿ ಚರ್ಚಿಸಲಾಗುತ್ತಿದೆ, ವಿಮರ್ಶಿಸಲಾಗುತ್ತಿದೆ. ಅದು ತತ್ವದರ್ಶನವಾಗಬಹುದು, ಧಾರ್ಮಿಕವಾಗಬಹುದು, ವೈಜ್ಞಾನಿಕವಾಗಿ ಆಗಬಹುದು ಅಥವ ಜೀವನದ ಅನುಭವಗಳಾಗಬಹುದು. ಸತ್ಯದ ವಿವಿಧ ಮಗ್ಗಲುಗಳು ವಿದ್ವಾಂಸರ, ದಾರ್ಶನಿಕರ, ಧಾರ್ಮಿಕ ಪಂಡಿತರ ಚರ್ಚೆಯ ವಿಷಯವಾಗಿದೆ. ಸತ್ಯ ಯಾವುದು, ಅದನ್ನು ಕಾಣುವುದು ಹೇಗೆ ಎಂಬ ಬಗ್ಗೆ ತಿಳಿದವರು ಉಪದೇಶಿಸುತ್ತಿರುತ್ತಾರೆ. ಜೀವನದ ಉದ್ದೇಶವೇ ಸತ್ಯದ ಹುಡುಕಾಟ ಎನ್ನುವುದನ್ನೂ ಕೇಳಿದ್ದೇವೆ. ಒಟ್ಟಾರೆಯಾಗಿ ಈ ಸತ್ಯ ಪರೀಕ್ಷೆಗೆ ಒಳಪಟ್ಟಷ್ಟು ಇತರ ಸಂಗತಿಗಳು ಒಳಪಟ್ಟಿರಲಾರವು. ಸತ್ಯವನ್ನು ಸುಳ್ಳಾಗಿ ಅರ್ಥೈಸಿದರೂ ಅರ್ಥೈಸಿದವರಿಗೆ ಅದರ ಲಾಭ/ನಷ್ಟಗಳೇ ಹೊರತು ಸತ್ಯಕ್ಕೆ ಬಾಧಕವಿಲ್ಲ. ಉದಾಹರಣೆಗೆ, ಬೆಂಕಿ ಸುಡುತ್ತದೆ, ಏಕೆಂದರೆ ಸುಡುವುದೇ ಅದರ ಗುಣ. ಒಂದು ದೇಶದಲ್ಲಿ ಮಾತ್ರ ಸುಡುತ್ತದೆ, ಇನ್ನೊಂದರಲ್ಲಿ ಸುಡುವುದಿಲ್ಲ ಎಂದಿಲ್ಲ. ಬೆಂಕಿ ಸುಡುವುದಿಲ್ಲ, ಸುಡಬಾರದು ಎಂದು ಎಷ್ಟೇ ಪ್ರಖರವಾಗಿ ವಾದಿಸಿದರೂ ಸುಡುವ ಗುಣ ಬದಲಾಗದು. ಬೆಂಕಿ ಇನ್ನು ಮುಂದೆ ನಮ್ಮ ದೇಶದಲ್ಲಿ ಸುಡಬಾರದು ಎಂದು ಜನರೆಲ್ಲರೂ ನಿರ್ಧರಿಸಿದರೂ, ಸರ್ಕಾರ ಆದೇಶ ಮಾಡಿದರೂ ಬೆಂಕಿ ಸುಡದೇ ಇರುತ್ತದೆಯೇ? ಹೀಗಾಗಿ ಬೆಂಕಿ ಸುಡುತ್ತದೆ ಎಂಬುದು ಪ್ರತ್ಯಕ್ಷವಾಗಿ, ಪ್ರಮಾಣವಾಗಿ, ಅನುಭವಕ್ಕೆ ಸಿಗುವ, ಬದಲಾಗದ ಸತ್ಯ. ಬೆಂಕಿಯ ವಿಷಯದಲ್ಲಿ ಹೇಳಿದಂತೆ ಇದೇ ಸತ್ಯ ಎಂದು ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಹೇಳಲಾಗದಿರುವುದು ಸಮಸ್ಯೆಗಳಿಗೆ ಕಾರಣವಾಗಿದೆ.
     ಸತ್ಯ ಏನೆಂಬುದನ್ನು ನಿರ್ಧರಿಸಲು ಯಾವುದಾದರೂ ಮಾನದಂಡವಿರಬೇಕು. ಅಂತಹ ಮಾನದಂಡ ಯಾವುದು? ಒಬ್ಬರು ಒಪ್ಪಿದ್ದನ್ನು ಇನ್ನೊಬ್ಬರು ಒಪ್ಪದಿರಬಹುದು. ಮಾನವನಿರ್ಮಿತ ಮಾನದಂಡಗಳು ಸದಾಕಾಲಕ್ಕೆ ನಿಲ್ಲಲಾರವು ಅಥವ ಬದಲಾವಣೆಗಳಿಗೆ ಈಡಾಗುತ್ತಲೇ ಇರುತ್ತವೆ. ಈ ವಿಶಾಲ ಬ್ರಹ್ಮಾಂಡ, ಜೀವವೈವಿಧ್ಯ ಮತ್ತು ದೇವರುಗಳಿಗೆ ಕುರಿತಂತೆ ಇದೇ ಸತ್ಯವೆಂದು ನಿಖರವಾಗಿ ಹೇಳುವುದು ಕಷ್ಟವೇ ಸರಿ. ವೈಜ್ಞಾನಿಕವಾಗಿ, ಧಾರ್ಮಿಕವಾಗಿ, ತಾರ್ಕಿಕವಾಗಿ ಪುಟ್ಟ ಮೆದುಳಿನ ಮನುಷ್ಯ ಇವುಗಳ ಕುರಿತು ತಿಳಿಯಲು ಪ್ರಯತ್ನಿಸುತ್ತಲೇ ಇದ್ದಾನೆ. ಪೂರ್ಣ ಸತ್ಯವೆನ್ನುವುದು ಇನ್ನೂ ಗೊತ್ತಾಗಬೇಕಿದೆ. ಹೀಗಿರಬಹುದು ಎಂಬ ಕಲ್ಪನೆ ಮಾತ್ರ ಮಾಡಬಹುದು. ಧಾರ್ಮಿಕವಾಗಿ ಸಹ ಜಗತ್ತು, ಜೀವ, ದೇವರನ್ನು ಸಂಪೂರ್ಣ ಸ್ಪಷ್ಟವಾಗಿ ಅರಿಯಲಾಗಿಲ್ಲವೆಂದೇ ಹೇಳಬೇಕು. ವಿವಿಧ ಧರ್ಮಗಳು, ಪಂಥಗಳು, ಪಂಗಡಗಳು ವಿವಿಧ ರೀತಿಗಳಲ್ಲಿ ಇವುಗಳನ್ನು ವಿಶ್ಲೇಷಿಸುತ್ತಿರುವುದೇ ಇದಕ್ಕೆ ಉದಾಹರಣೆ.
     ಎಲ್ಲಿ ವೈಚಾರಿಕ ಸ್ವಾತಂತ್ರ್ಯಕ್ಕೆ ಅವಕಾಶವಿರುವುದಿಲ್ಲವೋ ಅಲ್ಲಿ ಸತ್ಯಾನ್ವೇಷಣೆ ಕಷ್ಟ. ಸತ್ಯವನ್ನು ಧಾರ್ಮಿಕ ಹಿನ್ನೆಲೆಯಲ್ಲಿ ನೋಡುವುದಾದರೆ, ಧಾರ್ಮಿಕ ವಿಚಾರಗಳು ಜಗತ್ತು, ಜೀವ ಮತ್ತು ದೇವರ ಬಗ್ಗೆ ಕೆಲವು ಸಿದ್ಧಾಂತಗಳನ್ನು ಹೊಂದಿದ್ದು ಮಾನವನ ಧರ್ಮ ಎಂದರೆ ಏನು, ಅವನ ದೈನಂದಿನ ನಡವಳಿಕೆಗಳು ಹೇಗಿರಬೇಕು, ಯಾವ ಸಂಪ್ರದಾಯಗಳನ್ನು ಪಾಲಿಸಬೇಕು ಎಂದು ಹೇಳುತ್ತವೆ. ಈ ವಿಚಾರಗಳು ಮತ್ತು ಅನೂಚಾನವಾಗಿ ನಡೆದುಕೊಂಡು ಬಂದ ಸಂಪ್ರದಾಯಗಳ ಪೈಕಿ ಕೆಲವು ಅರ್ಥಹೀನ, ಅಸಂಬದ್ಧವೆನಿಸಿದರೂ ಪಾಲಿಸಿಕೊಂಡು ಬರುವವರೇ ಜಾಸ್ತಿ. ಇದೇನೇ ಇರಲಿ, ಇದು ನಿಜವಾದ ಧರ್ಮ, ನಾವು ನಂಬಿರುವ ದೇವರೇ ನಿಜವಾದ ದೇವರು. ಇದನ್ನು ಎಲ್ಲರೂ ಒಪ್ಪಲೇಬೇಕು, ಪಾಲಿಸಲೇಬೇಕು ಎನ್ನುವವರ ವಾದ ಭಿನ್ನಾಭಿಪ್ರಾಯ, ಸಮಸ್ಯೆ, ಸಂಘರ್ಷ, ಕ್ರಾಂತಿಗಳಿಗೆ ಕಾರಣಗಳಾಗಿವೆ. ವೈಚಾರಿಕತೆಗೆ ಅಡ್ಡಿಯಾದಾಗ ಸತ್ಯ ಕಾಣದಾಗುತ್ತದೆ. ಮಾನವನಿಗಿರುವ ಇತಿಮಿತಿಗಳಲ್ಲಿ ಎಲ್ಲವನ್ನೂ ಒರೆಗೆ ಹಚ್ಚಲಾಗುವುದಿಲ್ಲ. ಆದರೆ ಇದುವರೆವಿಗೆ ಹಿಂದಿನವರು ಹೇಳಿದ, ಒಪ್ಪಿದ ಸಂಗತಿಗಳನ್ನು ಅನುಭವದೊಂದಿಗೆ ಸೇರಿಸಿಕೊಂಡು ಆತ್ಮ ಒಪ್ಪಿದ ರೀತಿಯಲ್ಲಿ ನಡೆಯುವುದು ಸರಿಯಾದ ಮಾರ್ಗ. ಆತ್ಮ ಒಪ್ಪುವ ರೀತಿಯಲ್ಲಿ ನಡೆಯುವುದಕ್ಕೂ ಒಂದು ಮಾನದಂಡವಿರಲೇಬೇಕು, ಅದೇ ಸತ್ಯ. ಆತ್ಮ ಒಪ್ಪುವ ರೀತಿ ಯಾವುದೆಂದು ತಿಳಿಯಲು ಮಾಡುವ ಪ್ರಯತ್ನವೇ ಸತ್ಯಾನ್ವೇಷಣೆ. ಶ್ರವಣ, ಮನನ, ಮಥನಗಳೊಂದಿಗೆ ಅನುಭವ ಸೇರಿದರೆ ಸತ್ಯಕ್ಕೆ ಹತ್ತಿರವಾದ ಸಂಗತಿ ಗೋಚರವಾದೀತು.
     ಸತ್ಯಂ ಬ್ರೂಯಾತ್ ಪ್ರಿಯಂ ಬ್ರೂಯಾತ್ ನ ಬ್ರೂಯಾತ್ ಸತ್ಯಮಪ್ರಿಯಮ್ (ಸತ್ಯವನ್ನೇ ಹೇಳು, ಪ್ರಿಯವಾದದ್ದನ್ನು ಹೇಳು, ಅಪ್ರಿಯವಾದ ಸತ್ಯ ಹೇಳಬೇಡ) ಎನ್ನುತ್ತಾರೆ.  ಇದು ಸಮಯ, ಸಂದರ್ಭಗಳಿಗೆ ತಕ್ಕಂತೆ ಅಳವಡಿಸಿಕೊಳ್ಳಬೇಕಾದ ಸತ್ಯ. ಇಲ್ಲಿ ಸಾಮಾನ್ಯ ಹಿತ ಪ್ರಧಾನವಾಗುತ್ತದೆ.      ಮೌಲ್ಯಗಳು ಇರುವಲ್ಲಿ ಸತ್ಯಕ್ಕೆ ಬೆಲೆ ಇರುತ್ತದೆ, ಇಲ್ಲದಲ್ಲಿ ಅದು ಅನಾಥವಾಗುತ್ತದೆ. ಮೌಲ್ಯಯುತ ಸಮಾಜ ಬೇಡವೆಂದರೆ ಸತ್ಯವನ್ನು ದೂರವಿಟ್ಟರಾಯಿತು. ಪ್ರತಿಯೊಬ್ಬರೂ ಸಮಾಜ ಒಳ್ಳೆಯ ರೀತಿಯಲ್ಲಿ ಇರಬೇಕು, ಅನ್ಯಾಯ, ಮೋಸ ಆಗಬಾರದು ಎಂದು ಬಯಸುತ್ತಾರೆ. ಅವರು ಅಂಥವರು, ಇವರು ಇಂಥವರು ಎಂದು ದೂರುತ್ತಾರೆ. ಅವರೇನೋ ಅಂಥವರು, ಆದರೆ ನೀನೇಕೆ ಹೀಗೆ? ಎಂದರೆ ಸಿಗಬಹುದಾದ ಉತ್ತರ, ನ್ಯಾಯ, ನೀತಿ, ಧರ್ಮ ಎಂದರೆ ಬದುಕಲು ಸಾಧ್ಯವೇ? ಅವರದಾದರೋ ದೊಡ್ಡ ತಪ್ಪುಗಳು. ನಮ್ಮದಾದರೋ ಅನಿವಾರ್ಯವಾಗಿ ಮಾಡುವ ಸಣ್ಣ ತಪ್ಪುಗಳು ಎಂಬುದೇ! ಈ ಸಣ್ಣ ಪುಟ್ಟ ತಪ್ಪುಗಳೇ ಮುಂದೆ ದೊಡ್ಡ ತಪ್ಪುಗಳನ್ನು ಮಾಡಲು ತಳಪಾಯವಾಗುತ್ತವೆ, ಇವೇ ಮುಂದೆ ಸಾಮಾಜಿಕ ನ್ಯಾಯ, ಮೌಲ್ಯ, ಸತ್ಯ, ಮುಂತಾದ ಬಗ್ಗೆ ಮಾತನಾಡದಂತೆ ಕಟ್ಟಿಹಾಕುತ್ತವೆ.
     'ಸತ್ಯಂ ವದ ಧರ್ಮಂ ಚರ' (ಸತ್ಯವನ್ನೇ ಹೇಳು, ಧರ್ಮದಲ್ಲಿ ನಡೆ) ಎಂಬುದು ಸನಾತನವಾಣಿ. ಸತ್ಯ ಹೇಳುವುದಕ್ಕೆ ಆತ್ಮವಿಶ್ವಾಸ ಇದ್ದರೆ ಸಾಕು. ಆದರೆ ಸುಳ್ಳು ಹೇಳಲು ನೆನಪಿನ ಶಕ್ತಿಯ ಜೊತೆಗೆ ಸಮರ್ಥಿಸಿಕೊಳ್ಳುವ ಚಾಕಚಕ್ಯತೆಯೂ ಇರಬೇಕು. ಇಲ್ಲದಿದ್ದರೆ ಹೇಳಿದ ಸುಳ್ಳನ್ನು ಅರಗಿಸಿಕೊಳ್ಳುವುದು ಕಷ್ಟ. ಸತ್ಯಕ್ಕೆ ಗೌರವ, ಬೆಲೆ ಕೊಡದವರನ್ನು ಯಾರೂ ನಂಬಲಾರರು. ಆತ್ಮ, ಹೃದಯಗಳು ಸಾಥ್ ನೀಡುವ ಕೆಲಸಗಳು ಸತ್ಯ, ಸತ್ವ ಮತ್ತು ಆತ್ಮವಿಶ್ವಾಸದಿಂದ ಕೂಡಿರುತ್ತವೆ ಮತ್ತು ಇದರ ಪ್ರತಿಫಲವೇ ದೊರಕುವ ಸಂತೋಷ! ನಿರಾಯುಧವಾದ ಸತ್ಯ ಮತ್ತು ಷರತ್ತಿಲ್ಲದ ಪ್ರೀತಿಗಳ ಮಾತುಗಳದೇ ವಾಸ್ತವದಲ್ಲಿ ಕೊನೆಯ ಮಾತಾಗಿರುತ್ತದೆ. ಸತ್ಯಕ್ಕೆ ತಾತ್ಕಾಲಿಕವಾದ ಸೋಲುಂಟಾದರೂ, ಗೆಲುವಿನಿಂದ ಬೀಗಬಹುದಾದ ಸುಳ್ಳಿಗಿಂತಲೂ ಅದು ಹೆಚ್ಚು ಶಕ್ತಿಶಾಲಿ. ಸತ್ಯವನ್ನು ಬಗ್ಗಿಸಬಹುದು, ತಿರುಚಬಹುದು, ದುರುಪಯೋಗಪಡಿಸಿಕೊಳ್ಳಬಹುದು, ಆದರೆ ಬದಲಾಯಿಸಲು ಸಾಧ್ಯವಿಲ್ಲ.
-ಕ.ವೆಂ. ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ